ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ರಾಜಶ್ರೀ ಚಿತ್ರಮಂದಿರದಲ್ಲಿ ಕಳೆದ ರಾತ್ರಿ ‘ಕೆಜಿಎಫ್–2’ ಸಿನಿಮಾ ನೋಡುತ್ತಿದ್ದ ಸಂದರ್ಭದಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಪ್ರೇಕ್ಷಕರಿಬ್ಬರ ನಡುವೆ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.
ಇದನ್ನು ಓದಿ: ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವುದು ಬೇಡ ಎನ್ನುತ್ತಿದೆ 'ಅಗ್ರಿಫೈ'!
ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತ ಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಇನ್ನು ಗುಂಡು ಹಾರಿಸಿದ ಆರೋಪಿ ಪರಾರಿಯಾಗಿದ್ದು, ಆತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಘಟನೆ ಹಿನ್ನೆಲೆ: ಸಿನಿಮಾ ನೋಡುವ ಸಂದರ್ಭದಲ್ಲಿ ಮುಂದಿನ ಕುರ್ಚಿಯ ಮೇಲೆ ವಸಂತ ಕುಮಾರ ಕಾಲಿಟ್ಟಿದ್ದಾರೆ. ಇದಕ್ಕೆ ಮುಂದಿನ ಕುರ್ಚಿಯಲ್ಲಿ ಕುಳಿತಿದ್ದ ಆರೋಪಿ ಕಾಲು ತೆಗೆಯುವಂತೆ ಸೂಚಿಸಿದ್ದಾನೆ. ಇದೇ ವಿಷಯಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಜಗಳ ನಡೆದಿದೆ. ನಂತರ ಆರೋಪಿ ಹೊರಗಡೆ ಹೋಗಿ ಹತ್ತು ನಿಮಿಷದ ನಂತರ ಮತ್ತೆ ಚಿತ್ರಮಂದಿರದ ಒಳಗೆ ಬಂದು, ವಸಂತ ಕುಮಾರನ ಮೇಲೆ ಶೂಟ್ ಮಾಡಿದ್ದಾನೆ. ಎರಡು ಗುಂಡುಗಳು ವಸಂತ ಕುಮಾರನ ಕಾಲಿಗೆ ಬಿದ್ದಿದೆ.
ಇದನ್ನು ಓದಿ: ದಿಂಗಾಲೇಶ್ವರ ಸ್ವಾಮಿಗಳ ವಿರುದ್ಧ ಕಿಡಿಕಾರಿದ ಸಚಿವ ಸಿಸಿ ಪಾಟೀಲ್
ಶೂಟೌಟ್ ಸದ್ದಿಗೆ ಭಯಗೊಂಡ ಜನರು ಚಿತ್ರಮಂದಿರದ ಓಡಿ ಹೋಗಿದ್ದಾರೆ. ವಸಂತಕುಮಾರ ಮತ್ತು ಆತನ ಸ್ನೇಹಿತರು ಬೆಳಿಗ್ಗೆಯಿಂದ ಸಂಜೆವರೆಗೆ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ರಾತ್ರಿ 9 ಗಂಟೆಯ ಪ್ರದರ್ಶನಕ್ಕೆಂದು ಇವರೆಲ್ಲ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ಶಿಗ್ಗಾವಿ ಪಟ್ಟಣದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.