ನವದೆಹಲಿ: ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದರೂ, ವಿಧಾನಸಭಾ ಚುನಾವಣೆಗಳ ಫಲಿತಾಂಶ 2019ರ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರದ ಕಾರ್ಯವೈಖರಿಯ ಮೇಲೆ ನಿರ್ಧಾರವಾಗಲಿದೆಯೇ ಹೊರತು, ರಾಜ್ಯ ವಿಧಾನಸಭಾ ಚುನಾವಣೆಗಳ ಫಲಿತಾಂಶದಿಂದಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದಾಗಿ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂಬುದನ್ನು ತಳ್ಳಿಹಾಕಿದ ಜೇಟ್ಲಿ, ಕೇವಲ ಒಬ್ಬರ ಮೇಲೆ ಚುನಾವಣೆ ಅವಲಂಬಿತವಾಗಿರುವುದಿಲ್ಲ ಎಂದು ಕುಟುಕಿದ್ದಾರೆ.
"ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿನ ಸಮಸ್ಯೆಗಳು ಸಂಪೂರ್ಣವಾಗಿ ವಿಭಿನ್ನವಾಗಿದ್ದು, ಡಿಸೆಂಬರ್ 2003 ರಲ್ಲಿ ನಡೆದ ಚುನಾವಣೆಯಲ್ಲಿ ನಾವು ಈ ಮೂರೂ ರಾಜ್ಯಗಳಲ್ಲಿ(ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ) ಗೆಲುವು ಸಾಧಿಸಿದ್ದೆವು. ಆದರೆ, 2004ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹಾಗಾಗಿ ಯಾವುದನ್ನೂ ನಿರ್ಧರಿಸುವುದು ಸಾಧ್ಯವಿಲ್ಲ" ಎಂದು ಜೇಟ್ಲಿ ಹೇಳಿದರು.