ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬಿಜೆಪಿಯು ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಿದೆ.
ಇಂದು ಸಂಜೆ 4 ಗಂಟೆಗೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಬಿಜೆಪಿ ಹಿರಿಯ ನಾಯಕರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್ ಸೇರಿದಂತೆ ಪಕ್ಷದ ಇತರ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂಲಗಳ ಪ್ರಕಾರ, ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಅಲ್ಲದೆ, ಘಾಜಿಯಾಬಾದ್ ಮತ್ತು ನೋಯ್ಡಾ ಸೇರಿದಂತೆ ಉತ್ತರಪ್ರದೇಶದ 8 ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಿದೆ ಎನ್ನಲಾಗಿದೆ.