ಲಕ್ನೋ: ಪೌರತ್ವ (ತಿದ್ದುಪಡಿ) ಕಾಯ್ದೆ, 2019 ರ ವಿರುದ್ಧದ ಪ್ರತಿಭಟನೆಯ ಮಧ್ಯೆ, ಲಕ್ನೋ, ಆಗ್ರಾ, ಅಲಿಗಢ, ಮೌ, ಸಹರಾನ್‌ಪುರ, ಸಂಭಾಲ್ ಸಿಟಿ ಪ್ರದೇಶ, ಮೀರತ್, ಬರೇಲಿ ಮತ್ತು ಗಾಜಿಯಾಬಾದ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ನಗರಗಳ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತೆ ಅಂತರ್ಜಾಲದ ದುರುಪಯೋಗವನ್ನು ತಡೆಗಟ್ಟಲು ಮತ್ತು ಎಲ್ಲೆಡೆ ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
2019 ರ ಪೌರತ್ವ (ತಿದ್ದುಪಡಿ) ಕಾಯ್ದೆ(CAA) ವಿರುದ್ಧದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಡಿಸೆಂಬರ್ 21 ರಂದು ಮಧ್ಯಾಹ್ನ 12 ರವರೆಗೆ ಲಕ್ನೋದಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.
ಲಖನೌದಲ್ಲಿ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 55 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಒಪಿ ಸಿಂಗ್ ಗುರುವಾರ ತಿಳಿಸಿದ್ದಾರೆ.
2019 ರ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ರಾಜ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರೊಂದಿಗೆ ದೂರವಾಣಿ ಸಂವಾದ ನಡೆಸಿದ್ದು, ಇಂತಹ ಘಟನೆಗಳು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಎಂದು ಹೇಳಿದರು. ಸಿಂಗ್ ಅವರ ಲೋಕಸಭಾ ಕ್ಷೇತ್ರವಾದ ಲಖನೌದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಆದಿತ್ಯನಾಥ್ ಸಿಂಗ್ ಅವರಿಂದ ಮಾಹಿತಿ ಪಡೆದರು.
ಗುರುವಾರ ಲಖನೌ ಮತ್ತು ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಜೊತೆಗೆ ಪ್ರತಿಭಟನಾಕಾರರಿಗೆ ಕಾನೂನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದರು.
ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಆಸ್ತಿಗಳನ್ನು ಸರ್ಕಾರ ವಶಪಡಿಸಿಕೊಳ್ಳುತ್ತದೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿಯನ್ನು ಸರಿದೂಗಿಸುತ್ತದೆ ಎಂದು ಯೋಗಿ ಪ್ರತಿಭಟನಾಕಾರರಿಗೆ ಎಚ್ಚರಿಗೆ ನೀಡಿದರು. "ಪ್ರತಿಭಟನೆಯ ಹೆಸರಿನಲ್ಲಿ ನೀವು ಹಿಂಸಾಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ. ಹಿಂಸಾಚಾರದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆಯಲ್ಲಿ ಪಾಲ್ಗೊಂಡು ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟವರ ಆಸ್ತಿಯನ್ನು ವಶಪಡಿಸಿಕೊಳ್ಳುತ್ತದೆ ಮತ್ತು ಅದನ್ನು ಸಾರ್ವಜನಿಕ ಆಸ್ತಿಯ ಹಾನಿಯನ್ನು ಸರಿದೂಗಿಸಲಾಗುತ್ತದೆ" ಎಂದು ತಿಳಿಸಿದರು.
ಸಿಎಎ ಹೆಸರಿನಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಎಡಪಂಥೀಯರು ಜನರನ್ನು ದಾರಿತಪ್ಪಿಸಿದ್ದಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಸಿಎಂ ಯೋಗಿ ಆದಿತ್ಯನಾಥ್ ದೇಶದಲ್ಲಿ ಅಸಂಗತತೆಯನ್ನು ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು.