ನವದೆಹಲಿ: 17ನೇ ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಭಾನುವಾರ ಚುನಾವಣಾ ಆಯೋಗ ಪ್ರಕಟಿಸಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದೆ.
ಭಾನುವಾರ ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು, ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 18ರಂದು ನಡೆಯಲಿದ್ದು, ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮಾರ್ಚ್ 27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 29 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಏಪ್ರಿಲ್ 23ರಂದು ಮತ್ತೊಂದು ಹಂತದದಲ್ಲಿ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಂತದ ಚುನಾವಣೆಗೆ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಏಪ್ರಿಲ್ 5 ನಾಮಪತ್ರ ಪರಿಶೀಲನೆಗೆ ಕೊನೆ ದಿನವಾಗಿದ್ದು ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ.