ಕೊಲ್ಕತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಹಿರಿಯ ಮುಖಂಡ ಬುದ್ಧದೇಬ್ ಭಟ್ಟಾಚಾರ್ಯ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ 75 ವರ್ಷದ ಭಟ್ಟಾಚಾರ್ಯ ಅವರನ್ನು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಐಸಿಸಿಯು ಘಟಕಕ್ಕೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಭಟ್ಟಾಚಾರ್ಯ ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದರು.
2000- 2011ರವರೆಗೆ ಪಶ್ಚಿಮ ಬಂಗಾಳದ ಸಿಎಂ ಆಗಿದ್ದ ಭಟ್ಟಾಚಾರ್ಯ ಅವರು, 1977 ರಿಂದ ಸಿಎಂ ಆಗಿದ್ದ ಜ್ಯೋತಿ ಬಸು ಅವರಿಂದ ಅಧಿಕಾರ ವಹಿಸಿಕೊಂಡಿದ್ದರು. 2011ರ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಳ್ಳುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ)ನ ರಾಜಕೀಯ ಶಕ್ತಿ ಕೊನೆಗೊಂಡಿತು.