ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡುತ್ತಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧ ಪಕ್ಷದ ಕಾರ್ಯಕರ್ತರೇ ಅಖಾಡಕ್ಕಿಳಿದಿದ್ದು, ಬಿಎಸ್ವೈ ಅವರನ್ನು ಕಡೆಗಣಿಸಿದರೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರು ಸುಮ್ಮನಿರಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಈ ಕುರಿತು ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ ಪಾಟೀಲ ಬಹಿರಂಗ ಪತ್ರ ಬರೆದಿದ್ದು, ಕರ್ನಾಟಕದಲ್ಲಿ ತಳ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ಜನ ನಾಯಕ ಯಡಿಯೂರಪ್ಪನವರನ್ನು ಪಕ್ಷ ಸಂಘಟನೆ, ಆಡಳಿತಾತ್ಮಕ ವಿಚಾರ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ನೀವು ಸೇರಿದಂತೆ ಅನೇಕರು ಕಡೆಗಣಿಸುತ್ತಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಪತ್ರದ ಮೂಲಕ ನೇರ ಎಚ್ಚರಿಕೆ ನೀಡಿದ ಭೀಮಾಶಂಕರ್, ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ಜನ ನಾಯಕರಾಗಿ, ರೈತ, ಕಾರ್ಮಿಕ, ಬಡವ ಬಲ್ಲಿದರಾದಿಯಾಗಿ ಸರ್ವ ಜನಾಂಗದ, ಸರ್ವ ಸಮುದಾಯದ ಜನರು ಬಿಎಸ್ವೈ ಅವರನ್ನು ಅಭಿಮಾನದಿಂದ ಆಧರಿಸಿ, ಅವರ ಜನಪರ, ಸಾಮಾಜಿಕ ಕಳಕಳಿ ಮೆಚ್ಚಿ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪಕ್ಷಕ್ಕೆ ಮತ ಹಾಕಿ ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿದ್ದಾರೆ.
ಇಳಿ ವಯಸ್ಸಿನಲ್ಲಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ, ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದೆಲ್ಲೆಡೆ ಸುತ್ತಾಡಿ ಪಕ್ಷ ಕಟ್ಟಿದ್ದ ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪ. ಸಂಘಟನೆಯನ್ನ ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದವರನ್ನ ಮುಲಾಜಿಲ್ಲದೆ ಹೊರಗಿಟ್ಟು ಪಕ್ಷ ಸಂಘಟನೆ ಮಾಡಿದ್ದು ಯಡಿಯೂರಪ್ಪ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಗೆ ಯಡಿಯೂರಪ್ಪ ಕಾರಣ. ಅವರನ್ನು ಕಡೆಗಣಿಸಿದರೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.
ಇದಲ್ಲದೆ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನೂ ತುಳಿಯುವ ಪ್ರಯತ್ನಗಳು ಪಕ್ಷದಲ್ಲಿ ನಡೆಯುತ್ತಿವೆ ಎಂದು ಆರೋಪಿಸಿರುವ ಭೀಮಾ ಶಂಕರ ಪಾಟೀಲ, ಪರಿಸ್ಥಿತಿ ಹೀಗೆ ಮುಂದುವರೆದರೆ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಕೊಡುತ್ತಾರೆ ಎಂಬ ಸಂದೇಶ ರವಾನಿಸಿದ್ದಾರೆ.