ಚಾಮರಾಜನಗರ: ಇಲ್ಲಿನ ಗುಂಡ್ಲುಪೇಟೆ ತಾಲ್ಲೂಕಿನ ವೀರನಕಟ್ಟೆ ಗೇಟ್ ಬಳಿ ಕಳೆದ ವಾರ ದಲಿತ ವ್ಯಕ್ತಿಯೊಬ್ಬನ ಬೆತ್ತಲೆ ಮೆರವಣಿಗೆ ಮಾಡಿರುವ ವೀಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು" ಎಂದಿದ್ದಾರೆ.
ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು.
— H D Kumaraswamy (@hd_kumaraswamy) June 12, 2019
ಜೂನ್ 2ರಂದು ಮೈಸೂರಿನಿಂದ ರಾತ್ರಿ ಸ್ಕೂಟರ್ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣವನ್ನು ಕಸಿದಿದ್ದಾರೆ. ಬಳಿಕ ಮಾಡ್ರಹಳ್ಳಿ ಬಳಿಯಿರುವ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದ ಆವರಣಕ್ಕೆ ಬಂದು ಮಲಗಿದ್ದರು. ಬೆಳಗ್ಗೆ ಅರ್ಚಕರು ಬಂದಾಗ ದಲಿತನೆಂದು ತಿಳಿದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಆ ವ್ಯಕ್ತಿಯ ಸಂಬಂಧಿಯೊಬ್ಬರು ದೂರು ನೀಡಿದ್ದ ಅನ್ವಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.