ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕಾಮಗಾರಿಗಳ ಪ್ರಗತಿಯ ಕುರಿತು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ವಸತಿ ಸಚಿವ ಎಂ.ಟಿ.ಬಿ. ನಾಗರಾಜ್, ಪ್ರವಾಸೋದ್ಯಮ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಉಪಸ್ಥಿತರಿದ್ದರು. #kodagu pic.twitter.com/UDeFvDvOzU
— CM of Karnataka (@CMofKarnataka) January 29, 2019
ಕೊಡಗು ಜಿಲ್ಲೆಯಲ್ಲಿ ನಿರಾಶ್ರಿತರಿಗೆ ಮನೆ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವಂತೆ ತಿಳಿಸಿದರು.
ಮನೆ ನಿರ್ಮಾಣದ ಜೊತೆಗೆ ಕುಡಿಯುವ ನೀರು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗಳನ್ನು ಸಹ ತುರ್ತಾಗಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಕೊಡಗಿನಲ್ಲಿ 840 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಎರಡು ಬೆಡ್ ರೂಂ ಮನೆಗಳನ್ನು ಪ್ರತಿ ಮನೆಗೆ ರೂ. 9.85 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು 31.63 ಕೋಟಿಗಳ ಕಾಮಗಾರಿ ಗೆ ಅನುಮೋದನೆ ನೀಡಲಾಗಿದೆ. ಪುನರ್ವಸತಿ ಯೋಜನೆಗಾಗಿ ಪ್ರತ್ಯೇಕ ಆರ್.ಎಂ.ಸಿ ಪ್ಲಾಂಟ್ ನ್ನು ಮಾದಾಪುರ ಪ್ರದೇಶದಲ್ಲಿ ಸ್ಥಾಪಿಸಲಾಗಿದ್ದು, ಕರ್ಣಂಗೀರಿ ಪ್ರದೇಶದಲ್ಲಿ 40 ಮನೆಗಳನ್ನು ಮಾರ್ಚ್ ಮೊದಲ ವಾರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಸಭೆಗೆ ಮಾಹಿತಿ ನೀಡಿದರು.