ಬೆಂಗಳೂರು: ತಿರುಪತಿಯ ತಿರುಮಲದ ಕರ್ನಾಟಕ ಪ್ರವಾಸಿ ಸೌಧ ಆವರಣದಲ್ಲಿ ನೂತನ ಕಟ್ಟಡ ನಿರ್ಮಿಸಲು ಉಂಟಾಗಿದದ್ದ ತೊಡಕು ಇದೀಗ ನಿವಾರಣೆ ಹಂತ ತಲುಪಿದ್ದು, ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೊಸದಾಗಿ ವಸತಿ ಗೃಹಗಳನ್ನು ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ವಸತಿ ಗೃಹಗಳ ನಿರ್ಮಾಣ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದರು. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಲಕ್ಷ್ಮೀನಾರಾಯಣ, ರತ್ನಪ್ರಭಾ ಹಾಗೂ ಮುಜರಾಯಿ ಇಲಾಖೆ ಆಯುಕ್ತರಾದ ಷಡಕ್ಷರ ಸ್ವಾಮಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕ ಪ್ರವಾಸಿ ಸೌಧದ ಆವರಣದಲ್ಲಿ ವಸತಿ ಗೃಹಗಳನ್ನು ನಿರ್ಮಿಸುವ ಯೋಜನೆ ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಒಪ್ಪಿಗೆ ನೀಡದಿದ್ದುದು ಇದಕ್ಕೆ ಕಾರಣವಾಗಿತ್ತು.
ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಯಿತು. ವಸತಿಗೃಹಗಳ ಕೊರತೆಯಿಂದಾಗಿ ಯಾತ್ರಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು. 61.390 ಚದರ ಅಡಿ ಪ್ರದೇಶದಲ್ಲಿ ಕಟ್ಟಡವನ್ನು ಹೊಸದಾಗಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾವನೆ ಕುರಿತು ಚರ್ಚಿಸಿದರು. ಕರ್ನಾಟಕ ಪ್ರವಾಸಿ ಸೌಧದಲ್ಲಿ ಹಾಲಿ ಇರುವ 86 ಕೊಠಡಿಗಳ ದುರಸ್ತಿ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ತಿರುಪತಿ ನಗರದ ಗಾಂಧಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಛತ್ರಕ್ಕೆ ಸೇರಿದ 20 ಸಾವಿರ ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕರ್ನಾಟಕದ ಯಾತ್ರಾರ್ಥಿಗಳಿಗೆ ಮದುವೆ ಮತ್ತು ಇತರೆ ಸಮಾರಂಭಗಳನ್ನು ನಡೆಸಲು ಅನುಕೂಲವಾಗುವಂತೆ ಕಲ್ಯಾಣ ಮಂಟಪ, ವಸತಿ ಗೃಹಗಳನ್ನು ನಿರ್ಮಿಸುವಂತೆ ಸಿದ್ದರಾಮಯ್ಯ ಸೂಚನೆ ನೀಡಿದರು.
ಜೊತೆಗೆ ಬೆಂಗಳೂರು-ತಿರುಪತಿ ನಡುವೆ ನೇರ ವಿಮಾನ ಯಾನ ಸೇವೆ ಆರಂಭಿಸಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವಾಲಯವನ್ನು ಕೋರಲು ಸಿಎಂ ತಿಳಿಸಿದರು.