ನವದೆಹಲಿ: ಮಾರ್ಚ್ 23, 2018 ರಂದು ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಆಗಮಿಸಲಿದ್ದಾರೆ. ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಿಎಂಗೆ ಸಾಥ್ ನೀಡಲಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ದೆಹಲಿಯಲ್ಲಿ ಸಿದ್ದರಾಮಯ್ಯ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಕಾಂಗ್ರೆಸ್ ಸುಲಭವಾಗಿ ಎರಡು ಸ್ಥಾನ ಗೆಲ್ಲಬಹುದು. ಆ 2 ಸ್ಥಾನಕ್ಕೆ ಅಲ್ಪಸಂಖ್ಯಾತ, ದಲಿತ ಅಭ್ಯರ್ಥಿ ಹೂಡುವ ಬಗ್ಗೆ ಚರ್ಚೆ ನಡೆಯಲಿದೆ. ಸಮಾಲೋಚನೆ ನಡೆಯಲಿದೆ. ಅದೇ ಸಮುದಾಯದವರು ನಿವೃತ್ತರಾದ ಹಿನ್ನೆಲೆಯಲ್ಲಿ ಈ ಚಿಂತನೆ ನಡೆದಿದ್ದು, ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆಸುವ ನಿರೀಕ್ಷೆ ಇದೆ.
ಅದೇ ಸಮಯದಲ್ಲಿ ಲಿಂಗಾಯತ ಸಮುದಾಯಕ್ಕೆ 3ನೇ ಸ್ಥಾನ ಬಿಟ್ಟುಕೊಡುವ ಬಗ್ಗೆ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಜೊತೆ ಚರ್ಚೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ.