ಚಿಕ್ಕಮಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಾಜಕೀಯ ದ್ವೇಷವೋ ಅಥವಾ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆಯೇ ಎಂಬ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದ ಅನ್ವರ್ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಪೊಲೀಸರು ಆಸೀಫ್ ಹಾಗೂ ಯುಸೂಫ್ ಹಾಜಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಇಬ್ಬರು ಆರೋಪಿಗಳೂ ಪಿಎಫ್ಐ ಸಂಘಟನೆಯಲ್ಲಿದ್ದರು ಎನ್ನಲಾಗಿದೆ. ಈ ಸಂಬಂಧ ಬಸವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಶುಕ್ರವಾರ ರಾತ್ರಿ ಚಿಕ್ಕಮಗಳೂರಿನ ಗೌರಿ ಕಾಲುವೆ ಬಳಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅನ್ವರ್ (44) ಎಂಬಾತನನ್ನು ಮೂರು ಬಾರಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ರಾತ್ರಿಯಿಂದಲೇ ತನಿಖೆ ಆರಂಭಿಸಿದ್ದರು. ಸದ್ಯ ಅನ್ವರ್ ಮೃತದೇಹ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರಿಕ್ಷೆ ನಡೆಯಬೇಕಿದೆ.