ನವ ದೆಹಲಿ: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾ.ಆದರ್ಶ್ ಕುಮಾರ್ ಗೋಯಲ್,ಯು.ಯು ಲಲಿತ್ ಪೀಠದಿಂದ ಆದೇಶ ನೀಡಲಾಗಿದೆ. ಮೂರು ತಿಂಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಸಚಿವ ಕೆ.ಜೆ. ಜಾರ್ಜ್ ಪ್ರಕರಣ ಪ್ರಮುಖ ಆರೋಪಿಯಾಗಿದ್ದು, ಸಿಬಿಐ ತನಿಖೆಗೆ ಆದೇಶಿಸಿರುವುದರಿಂದ ಜಾರ್ಜ್ ಗೆ ಇದು ಮತ್ತೆ ತಲೆಬಿಸಿಯಾಗಿ ಪರಿಣಮಿಸಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹಿನ್ನೆಲೆ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ಆದೇಶ ಪ್ರತಿ ಇನ್ನೂ ನಮ್ಮ ಕೈ ಸೇರಿಲ್ಲ. ಆದೇಶ ಪ್ರತಿ ಬಂದ ಮೇಲೆ ಪರಿಶೀಲಿಸಿ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.
ಸಿಬಿಐ ತನಿಖೆಗೆ ಸುಪ್ರೀಂ ಆದೇಶ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಗೆ ಜವಾಬ್ದಾರಿ ಇದ್ದರೆ ತಕ್ಷಣ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು. ಜಾರ್ಜ್ ಜೊತೆಗೆ ಈ ಸಂಬಂಧದ ಇನ್ನೂ ಇಬ್ಬರು ಅಧಿಕಾರಿಗಳೂ ಸಹ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದರ ಬಗ್ಗೆ ಇನ್ನೂ ಎರಡು ದಿನ ಕಾದು ನೋಡುತ್ತೇವೆ, ಜಾರ್ಜ್ ಅವರ ರಾಜೀನಾಮೆ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.