ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಾಸಕ ಹ್ಯಾರಿಸ್ ಅವರಿಗೆ ಟಿಕೇಟ್ ಸಿಗುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೆಲ್ಲುವ ಆಧಾರದ ಮೇಲೆ ಸ್ಕ್ರೀನಿಂಗ್ ಕಮಿಟಿ ನಿರ್ಧಾರ ಕೈಗೊಂಡು ಟಿಕೆಟ್ ಹಂಚಿಕೆ ಮಾಡಲಾಗಿದೆ. ತಾಂತ್ರಿಕ ಕಾರಣಗಳಿಂದ 6 ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿಲ್ಲ. ಈ ಹಿಂದಿನ ಚುನಾವಣೆಯಲ್ಲಿ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದ ಎನ್.ಎ.ಹ್ಯಾರಿಸ್ ಅವರಿಗೆ ಟಿಕೆಟ್ ಸಿಗುವುದು ಖಚಿತ. ಇದರಲ್ಲಿ ಅನುಮಾನವಿಲ್ಲ ಎಂದು ಜಿ.ಪರಮೇಶ್ವರ್ ಹೇಳಿದರು.
ಟಿಕೆಟ್ ಹಂಚಿಕೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿರುವ ಆಕಾಂಕ್ಷಿಗಳ ಮನವೊಲಿಸಲು 4 ತಂಡಗಳನ್ನು ಪಕ್ಷ ರಚಿಸಲಿದೆ ಎಂದ ಪರಮೇಶ್ವರ್, ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಮುಖ್ಯ ಉದ್ದೇಶ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಉದ್ಯಮಿ ಪುತ್ತರ ವಿಧ್ವತ್ ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಹಿನ್ನೆಲೆಯಲ್ಲಿ ಶಾಸಕ ಹ್ಯಾರಿಸ್'ಗೆ ಟಿಕೆಟ್ ದೊರೆಯುವುದೇ, ಇಲ್ಲವೇ ಎಂಬ ಅನುಮಾನ ಎಲ್ಲೆಡೆ ವ್ಯಕ್ತವಾಗಿತ್ತು. ಅಲ್ಲದೆ, ಭಾನುವಾರ ಕಾಂಗ್ರೆಸ್ ಬಿಡುಗಡೆ ಮಾಡಿದ 218 ಅಭ್ಯರ್ಥಿಗಳ ಪಟ್ಟಿಯಲ್ಲೂ ಹ್ಯಾರಿಸ್ ಹೆಸರು ಇಲ್ಲದಿದದ್ದಕ್ಕೆ, ಹ್ಯಾರಿಸ್ ಬೆಂಬಲಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.