ಹಾಸನ: ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಶ್ರವಣಬೆಳಗೋಳದ ಮಹಾಮಸ್ತಕಾಭಿಷೇಕದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ 'ಹೆಲಿ ಟೂರಿಸಂ' ನಿರ್ಮಾಣ ಮಾಡಲು ಹಾಸನ ಜಿಲ್ಲಾಡಳಿತ ನಿರ್ಧರಿಸಿದೆ.
ಶ್ರವಣಬೆಳಗೊಳದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಬಾಹುಬಲಿಯ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮಕ್ಕಾಗಿ ದೇಶ-ವಿದೇಶಗಳ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ಶ್ರವಣಬೆಳಗೊಳದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕಡಿಮೆ ದರದಲ್ಲಿ ಹೆಲಿಕಾಪ್ಟರ್ ಸೇವೆ ಒದಗಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಈ ಕುರಿತಂತೆ ಸಚಿವ ಎ.ಮಂಜು ಮತ್ತು ಅಧಿಕಾರಿಗಳು ಕೇಂದ್ರದ ಪವನ್ ಹನ್ಸ್ ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಪ್ರಧಾನ ವ್ಯವಸ್ಥಾಪಕ ಜ್ಞಾನಪ್ರಕಾಶ್ ಅವರ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಪ್ರಮುಖವಾಗಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಕುರಿತು ಅಕ್ಟೋಬರ್ 7 ರಂದು ಜಿಲ್ಲಾಡಳಿತ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.