ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಎನ್ಐಟಿಕೆ ಬಳಿಯ ಟೋಲ್ ಗೇಟ್ ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟಣೆ ವತಿಯಿಂದ ಇಂದಿನಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ಇದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ- ಹಂಪಿಯಲ್ಲಿ ಆಕಸ್ಮಿಕ ಬೆಂಕಿಗೆ ಅಂಗಡಿಗಳು, ಛತ್ರ, ಹೋಟೆಲ್ ಸುಟ್ಟು ಭಸ್ಮ
ವಾಸ್ತವವಾಗಿ, ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 18ರಂದು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಬಳಿಕ ಬಿಡುಗಡೆ ಮಾಡಿದ್ದರು. ಆ ನಂತರದಲ್ಲಿ ಸುರತ್ಕಲ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ಅನ್ನು ತೆರವುಗೊಳಿಸುವವರೆಗೂ ಹೋರಾಟ ಮುಂದುವರೆಯಲಿದ್ದು ಅಲ್ಲಿಯವರೆಗೂ ಅನಿರ್ಧಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿತ್ತು.
ಇದನ್ನೂ ಓದಿ- ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವಿರೋಧವಾಗಿ ಆಯ್ಕೆ
ಏತನ್ಮಧ್ಯೆ, ನಿನ್ನೆ (ಅ.27) ಹೋರಾಟ ಸಮಿತಿಯೊಂದಿಗೆ ಸಭೆ ನಡೆಸಿದ್ದ ೆ ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಟೋಲ್ ಗೇಟ್ ತೆರವಿಗೆ ಇನ್ನೂ ಹತ್ತು ದಿನಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಸಭೆಯಲ್ಲಿಯೇ ಖಂಡಿಸಿದ ಸಮಿತಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರಕಟಿಸಿತು. ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ