ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಇಡೀ ಕೊಡಗು ಜಿಲ್ಲೆ ತತ್ತರಿಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನತೆ ನೆರವಿನ ಹಸ್ತ ಚಾಚಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಹೊರತಾಗಿಲ್ಲ.
ರಾಜ್ಯದ ರಸ್ತೆ ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಒಂದು ದಿನದ ವೇತನವನ್ನು ಕೊಡಗು ಪ್ರವಾಹ ಪರಿಹಾರ ನಿರ್ವಹಣೆಗೆ ನೀಡಲು ಮುಂದಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 1.16 ಲಕ್ಷ ಸಿಬ್ಬಂದಿಯ ಒಂದು ದಿನದ ವೇತನ ಸಂಗ್ರಹಿಸಿ ಒಟ್ಟು 11.80 ಕೋಟಿ ರೂ.ಗಳನ್ನು ನೀಡಲು ಸಂಸ್ಥೆ ನಿರ್ಧರಿಸಿದೆ.
ಈ ಬಗ್ಗೆ ಸಾರಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, 1.16 ಲಕ್ಷ ಸಿಬ್ಬಂದಿಯ ಒಂದು ದಿನದ ವೇತನ ಒಗ್ಗೂಡಿಸಿ 11.80ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.