ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಕಳೆದ ಗುರುವಾರ ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜನತೆಯ ಮತ ಗಳಿಸುವುದು ಹೇಗೆ ಎಂಬುದೇ ಮೋದಿಗೆ ಚಿಂತೆಯಾಗಿದೆ. ಹಾಗಾಗಿ ಎಲ್ಲಾ ಸಂದರ್ಭವನ್ನೂ ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದಾರೆ. ಇದು ಸರಿಯಲ್ಲಿ ಎಂದು ವಾಗ್ದಾಳಿ ನಡೆಸಿದರು.
ಇನ್ನು, ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುವ ಅಮಿತ್ ಶಾ, ಭಯೋತ್ಪಾದಕರನ್ನು ಮಟ್ಟ ಹಾಕುವುದು ಹೇಗೆ ಎಂಬುದನ್ನು ಯೋಚಿಸುವುದು ಬಿಟ್ಟು, ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಷ್ಟಕ್ಕೂ ದೇಶದ ಮೇಲೆ ಭಯೋತ್ಪಾದಕರ ದಾಳಿ ನಡೆದಿರುವುದು ಬಿಜೆಪಿ ಮೋದಿ ಸರ್ಕಾರದ ಅವಧಿಯಲ್ಲೇ ಹೆಚ್ಚು. ಬಿಜೆಪಿಯವರು ಮಾತೆತ್ತಿದರೆ ತಾವೇ ದೇಶಪ್ರೇಮಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶಪ್ರೇಮಿಯೇ ಎಂದು ದಿನೇಶ್ ಗುಂಡುರಾವ್ ಹೇಳಿದರು.