ಬೆಂಗಳೂರು: ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸದರ ಅಮಾನತು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು.
ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ.
ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತು ಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ.
ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ: C Voter Survey: ಖರ್ಗೆ, ರಾಹುಲ್, ನಿತೀಶ್, ಕೇಜ್ರಿವಾಲ್... I.N.D.I.A. ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು?
ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ.
ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು.
ಹೀಗಾಗಿ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ, ಕಳುಹಿಸಿದ್ದಾರೆ.
ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ.
ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ.
ಮಾಧ್ಯಮ ಪ್ರತಿಕ್ರಿಯೆ:
ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು. ಲೋಕಸಭೆ ಚುನಾವಣೆವರೆಗೂ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ, ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ.
ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಬಗ್ಗೆ ಕೇಳಿದಾಗ, “ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದು, ಇದರಲ್ಲಿ ತಪ್ಪಿತಸ್ಥರನ್ನು ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಅವರು ಮೇಧಾವಿಗಳು. ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದೆ. ಅವರ ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಅವರು ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದರು.
ಇದನ್ನೂ ಓದಿ: Daily GK Quiz: ಭಾರತದ ಕೋಗಿಲೆ ಎಂದು ಯಾರನ್ನು ಕರೆಯುತ್ತಾರೆ?
ಬರದ ಸಮಯದಲ್ಲೂ ಮುಖ್ಯಮಂತ್ರಿಗಳು ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಸಮಯ ಉಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ವಿಮಾನಗಳಲ್ಲಿ ಓಡಾಡುವುದು ಸಹಜ” ಎಂದರು.
ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳ ಭೇಟಿಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಬೇಕಿತ್ತು ಎಂದು ಕೇಳಿದಾಗ, “ನಾವು ಸರ್ವಪಕ್ಷ ನಿಯೋಗವನ್ನು ಪ್ರಧಾನಿಗಳ ಬಳಿ ಕರೆದೊಯ್ಯಲು ಸಿದ್ಧವಿದ್ದೇವೆ. ಅವರು ಅಧಿಕಾರಿಗಳ ಭೇಟಿಗೆ ಸಮಯ ನೀಡಿಲ್ಲ” ಎಂದು ತಿಳಿಸಿದರು.
ಸಚಿವ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, “ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ” ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.